ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು.
ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡಿನಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ನೀಡಿರುವ ಹೇಳಿಕೆಯು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.