ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಒತ್ತಾಯ ಮಾಡಿರುವ ಅವರು; ಅಪ್ರಜಾಸತ್ತಾತ್ಮಕವಾಗಿ ಗೆದ್ದಿರುವ ಆ ಪಕ್ಷದ ಎಲ್ಲಾ 135 ಶಾಸಕರನ್ನೂ ಅನರ್ಹಗೊಳಿಸಬೇಕು. ಕೇಂದ್ರ ಸರಕಾರವೂ ಈ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಹಾಗೂ ಈ ಅಕ್ರಮ ಸರಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಪಡಿಸಿದರು.
ಮತದಾರರಿಗೆ ಸಲ್ಲದ ಆಸೆ, ಆಮಿಷ ಒಡ್ಡಿ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ನಾನು ಪದೇಪದೆ ಹೇಳಿದ್ದೆ. ಗಿಫ್ಟ್ ಕೂಪನ್, ತವಾ, ಕುಕ್ಕರ್, ಇಸ್ತ್ರಿಪೆಟ್ಟಿಗೆ, ಸೀರೆ ಕೊಟ್ಟ ರಾಜ್ಯ ಕಾಂಗ್ರೆಸ್ ಪಕ್ಷದ ‘ಅಸಲಿ ಹಸ್ತ’ದ ಹಕೀಕತ್ತು ಹೀಗಿದೆ ನೋಡಿ. ಸ್ವತಃ ರಾಜ್ಯದ ಘನತವೇತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸುಪುತ್ರನೇ ರಾಜ್ಯಕ್ಕೆ ಸತ್ಯದ ಸಾಕ್ಷಾತ್ಕಾರ ಮಾಡಿದ್ದಾರೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಉಳಿದ ಕ್ಷೇತ್ರಗಳ ಕಥೆ ಹಾಗಿರಲಿ, ಕರ್ನಾಟಕದ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿಯೇ ಜಾತಿ ಸಮಾವೇಶ ನಡೆಸಿ ಕುಕ್ಕರ್, ಇಸ್ತ್ರಿಪೆಟ್ಟಿಗೆಗಳ ಭರ್ಜರಿ ಸಮಾರಾಧನೆ ನಡೆದಿದೆ. ಸಮಾಜವಾದಿ ಮುಖ್ಯಮಂತ್ರಿ ಮಹೋದಯರ ಹಾದಿಯಲ್ಲೇ ನಡೆದಿರುವ ಇಡೀ ರಾಜ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅದೇ ವಾಮಮಾರ್ಗದಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನಿಟ್ಟು ಕೆಂಗಲ್ ಹನುಮಂತಯ್ಯ ಅವರು ಕಟ್ಟಿದ ಕನ್ನಡಿಗರ ಪ್ರಜಾಸತ್ತೆಯ ಮಹಾದೇಗುಲ ವಿಧಾನಸೌಧದ ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.