ಬೆಂಗಳೂರು: ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈ ರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಎರಡನೇ ಬಾರಿ ಕೋವಿಡ್ ಸಚಿವ ಸಂಪುಟ ಉಪ ಸಮಿತಿ ಸಭೆ ಸೇರಿತ್ತು. ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಗಳನ್ನ ನಡೆಸಲಾಗ್ತಿದೆ ಎಂದರು. ಕೋವಿಡ್ ಇಳಿಮುಖ ಕಾಣುವ ವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುವುದಾಗಿ ಹೇಳಿದರು. ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ವಿಡುವ ಕೆಲಸವನ್ನ ಸರ್ಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.