ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು (Droupadi Murmu) ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಅಯೋಧ್ಯೆ (Ayodhya) ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ, ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮತ್ತು ಆರ್ಎಸ್ಎಸ್ ಮುಖಂಡ ರಾಮ್ ಲಾಲ್ ಅವರು ರಾಷ್ಟ್ರಪತಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ಜನವರಿ 22ರಂದು ನಡೆಯಲಿರುವ ಅದ್ಧೂರಿ ಕಾರ್ಯಕ್ರಮಕ್ಕೆ ಸುಮಾರು 7 ಸಾವಿರ ಗಣ್ಯರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರನ್ನೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುತ್ತಿದೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್ ಹಾಗೂ ಅವುಗಳ ಸಂಯೋಜಿತ ಸಂಘಟನೆಗಳ ಮುಖ್ಯ ಪ್ರತಿನಿಧಿಗಳು ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.