ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು. ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ.
ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು. ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.