ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಎಲ್ಲರ ಚಿತ್ತವನ್ನು ಕದ್ದ ಕ್ಷೇತ್ರ ನೀರಾವರಿ. ಈ ಕ್ಷೇತ್ರಕ್ಕೆ ಪ್ರಸಕ್ತ ಸರ್ಕಾರ ಬರೋಬ್ಬರಿ 19,179 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕಾಗಿ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪ ವಿಭಾಗಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ.
ಕಾವೇರಿ ನೀರಾವರಿ ನಿಗಮದಡಿ ವಿಶ್ವೇಶ್ವರಯ್ಯ ನಾಲಾ ಜಾಲದ ಹೆಬ್ಬಕವಾಡಿ, ನಿಡಘಟ್ಟ, ತುರುಗನೂರು, ಮಳವಳ್ಳಿ ತಾಲ್ಲೂಕಿನ ಮಾದವಮಂತ್ರಿ ನಾಲೆಗಳ ಹಾಗೂ ಮದ್ದೂರು ತಾಲ್ಲೂಕು ಕೆಮ್ಮಣ್ಣುನಾಲಾ ಆಧುನೀಕರಣ, ಹುಣಸೂರು ತಾಲ್ಲೂಕಿನ ಮರದೂರು, ಕನಕಪುರದ ಹೆಗ್ಗನೂರು ಕೆರೆ ತುಂಬಿಸುವ ಯೋಜನೆಗಳು, ಶ್ರೀರಂಗ ಕುಡಿಯುವ ನೀರು ಯೋಜನೆಗೆ ಪೈಪ್ಲೈನ್ ಮೂಲಕ ನೀರು ಒದಗಿಸುವ ಯೋಜನೆ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಲೆಗಳ ಅಭಿವೃದ್ಧಿ, ಗುಬ್ಬಿಯ ಮಠದಹಳ್ಳಿ ಕುಡಿಯುವ ನೀರು ಯೋಜನೆ, ರಾಮನಗರದ ಬಳಿ ಅರ್ಕಾವತಿ River Front Development ಯೋಜನೆಗಳನ್ನು ಅಂದಾಜು 2,000 ಕೋಟಿ ರೂ. ಮೊತ್ತದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ತನ್ನ 2023-24ನೇ ಸಾಲಿನ ಆಯವ್ಯಯದಲ್ಲಿ 5,300 ಕೋಟಿ ರೂ. ಅನುದಾನ ಘೋಷಿಸಿಲಾಗಿತ್ತು. ಆದರೆ ಈವರೆಗೆ ಯಾವುದೇ ಅನುದಾನ ಬಿಡುಗಡೆಯಾಗಿರುವುದಿಲ್ಲ. ಈ ಯೋಜನೆಯಡಿ ರಾಜ್ಯ ಸರ್ಕಾರವು ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸಲು ಯೋಜಿಸಿದ್ದು, ಆಯವ್ಯಯದಲ್ಲಿ ಘೋಷಿಸಿದಂತೆ ಅನುದಾನವನ್ನು ಬಿಡುಗಡೆ ಮಾಡಿ ಯೋಜನೆಯನ್ನು ರೈತರಿಗೆ ತಲುಪಿಸಲು ಸಹಕಾರಿಯಾಗುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಜಲಾಶಯ ವ್ಯಾಪ್ತಿಯಲ್ಲಿನ ರೈತರ ಬಹುದಿನದ ಬೇಡಿಕೆಯಾದ ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧವಾಗಿದ್ದು, ಸದರಿ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಚಾಲನೆಗೊಳಿಸಿದ್ದು, ಯೋಜನೆ ಕಾರ್ಯಗತಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.