ನವದೆಹಲಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದೆಹಲಿಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗತೊಡಗಿದ್ದು, ದೆಹಲಿಯ ಹಲವು ಭಾಗಗಳಲ್ಲಿ ರಸ್ತೆಗಳು ಜಾಲವೃತವಾಗಿದೆ. ಸದ್ಯ ನಾಳೆ ಸಹ ದೆಹಲಿಯಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ಮಳೆಯಾಗಿದೆ. ಇದು 1982 ರಿಂದ ಇಲ್ಲಿಯವರೆಗೆ ಜುಲೈ ತಿಂಗಳಲ್ಲಿ ಒಂದೇ ದಿನದಲ್ಲಾದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿಯಲ್ಲಿ ಮುಂದಿನ 2-3 ದಿನಗಳ ಕಾಲ ಹೆಚ್ಚಿನ ತೀವ್ರತೆಯ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.