ಬೆಂಗಳೂರು ;- 7 ಜಿಲ್ಲೆಗಳ 30ಕ್ಕೂ ಹೆಚ್ಚಿನ ಕಾಂಗ್ರೆಸ್ ಶಾಸಕರ ಜತೆ ರಾತ್ರಿವರೆಗೂ ಸಿಎಂ ಸಿದ್ದರಾಮಯ್ಯ ಅವರು ಸರಣಿ ಸಭೆ ನಡೆಸಿದರು. ಗೃಹಕಚೇರಿ ಕೃಷ್ಣಾದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆಯಿಂದ ಆರಂಭವಾದ ಸಭೆಯಲ್ಲಿ ಮಂಡ್ಯ, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 30ಕ್ಕೂ ಹೆಚ್ಚಿನ ಶಾಸಕರು, ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳ ಜತೆ ಚರ್ಚೆ ನಡೆಸಿದರು.
ಈ ವೇಳೆ ಶಾಸಕರ ಕ್ಷೇತ್ರಗಳಲ್ಲಿನ ಸಮಸ್ಯೆಗಳ ಕುರಿತಂತೆ ಅಹವಾಲು ಆಲಿಸಿದರು. ಕ್ಷೇತ್ರಗಳಲ್ಲಿ ಆಗಬೇಕಿರುವ ಕೆಲಸಗಳು, ಅನುದಾನ, ವರ್ಗಾವಣೆ ಹಾಗೂ ಲೋಕಸಭಾ ಚುನಾವಣೆ ತಯಾರಿ ಕುರಿತಂತೆ ಚರ್ಚೆ ನಡೆಸಿ ಶಾಸಕರು ಹಾಗೂ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಕೆಲವೊಂದು ಸೂಚನೆಗಳನ್ನು ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯ ಶಾಸಕರೊಂದಿಗೆ ಸಮನ್ವಯತೆ ಸಾಧಿಸಿ, ಅವರು ತಿಳಿಸುವ ವಿಚಾರಗಳ ಬಗ್ಗೆ ಗಮನಹರಿಸಬೇಕು. ಶಾಸಕರ ಸಮಸ್ಯೆಗಳಿಗೆ ತಕ್ಷಣದಲ್ಲಿ ಸ್ಪಂದಿಸಬೇಕು. ತಮ್ಮಿಂದ ಪರಿಹರಿಸಲು ಸಾಧ್ಯವಾಗದಿದ್ದರೆ, ನನ್ನ ಗಮನಕ್ಕೆ ತರಬೇಕು. ಒಂದು ವೇಳೆ ಸಚಿವರು ಗಮನ ಕೊಡದಿದ್ದರೆ ನನಗೆ ನೇರವಾಗಿ ತಿಳಿಸಿ ಎಂದು ಹೇಳಿದರು.