ಮಂಡ್ಯ: ಕಾಂಗ್ರೆಸ್ ಸರ್ಕಾರದಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಲಿದ್ದಾರೆ.
ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.