ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಿರ್ಧಾರ ಪುನರ್ ಪರಿಶೀಲಿಸಲು ಪ್ರಾಧಿಕಾರಕ್ಕೆ ಮನವಿ ಮಾಡುತ್ತೇವೆ ಎಂದರು. ಪ್ರತಿನಿತ್ಯ 10,000 ಕ್ಯೂಸೆಕ್ಸ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು. ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಆದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ ನೀರು ಇಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರಕ್ಕೆ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡುತ್ತೇವೆ ಎಂದರು.