ಧಾರವಾಡ: ಆರ್‌ಟಿಐ ಕಾರ್ಯಕರ್ತರೊಬ್ಬರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಗಿಣಿವಾಲದ ಅವರ ಪ್ರಕರಣ ಇದೀಗ ಪ್ರತಿಭಟನೆ ಸ್ವರೂಪ ಪಡೆದುಕೊಂಡಿದೆ. ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಿದರು.
ಆರ್‌ಟಿಐ ಕಾರ್ಯಕರ್ತನ ಕಿರುಕುಳದಿಂದ ಪಿಡಿಓ ನಾಗರಾಜ್ ಅವರು ತೀವ್ರ ಮನನೊಂದು ಇಲಿ ಔಷಧ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ನಾಗರಾಜ್ ಅವರಿಗೆ ನ್ಯಾಯ ಕೊಡಿಸಬೇಕು. ಇನ್ನೂ ಅನೇಕ ನೌಕರರು ಸರಿಯಾಗಿ ಕೆಲಸ ಮಾಡಲು ಆಗುತ್ತಿಲ್ಲ. ಈ ರೀತಿಯ ಒತ್ತಡಕ್ಕೆ ಸಿಲುಕಿ ಸಾವನ್ನಪ್ಪುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಭದ್ರತೆಯೇ ಇಲ್ಲದಂತಾಗಿದೆ.
ಸರ್ಕಾರಿ ನೌಕರರಿಗೆ ಮಾನಸಿಕ ಕಿರುಕುಳ ಆಗದಂತೆ ನೋಡಿಕೊಳ್ಳಬೇಕು. ವಿನಾಕಾರಣ ಕಿರುಕುಳ ನೀಡುವವರಿಗೆ ಕಠಿಣ ಕ್ರಮ ಜಾರಿ ಮಾಡಬೇಕು ಎಂದು ನೌಕರರು ಜಿಲ್ಲಾಧಿಕಾರಿಗಳಿಗೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದರು.