ರಾಮನಗರ: ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಗುಡುಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್, ದುರಾದೃಷ್ಟವೆಂದರೆ ಹಣದ ಆಮಿಷ ನೀಡುವ ಸ್ಥಿತಿಗೆ ಕಾಂಗ್ರೆಸ್ ಬಂದಿದೆ. ವಿಧಾನಸಭಾ ಚುನಾವಣೆ ವೇಳೆ ರಾಮನಗರದಲ್ಲೂ ಗಿಫ್ಟ್ ಕಾರ್ಡ್ಗಳನ್ನ ಹಂಚಲಾಗಿತ್ತು. ಆದ್ದರಿಂದ ದೇಶದಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿದೆ ಎಂದಿದ್ದಾರೆ.
ಪಕ್ಷದ ವರಿಷ್ಠರ ಜೊತೆಗೆ ಜೆಡಿಎಸ್ನ ಎಲ್ಲ ನಾಯಕರು ತಮ್ಮ ಅಭಿಪ್ರಾಯಗಳನ್ನ ತಿಳಿಸಿದ್ದಾರೆ. ಪಕ್ಷದ ಹಿರಿಯ ನಾಯಕರೆಲ್ಲರೂ ಮೈತ್ರಿ ಸಭೆಯಲ್ಲಿ ಭಾಗಿಯಾಗಿದ್ದು, ಅವರ ಅಭಿಪ್ರಾಯಗಳಿಗೂ ಮನ್ನಣೆ ನೀಡಲಾಗಿದೆ ಎಂದು ತಿಳಿಸಿದರು. ನಮ್ಮ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಹಿಂದೆ ಕಾಂಗ್ರೆಸ್ ಜೊತೆಗೆ ಆಕಸ್ಮಿಕವಾಗಿ ಮೈತ್ರಿ ಆಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಜೊತೆ ಮೈತ್ರಿ ಅನಿವಾರ್ಯವಾಗಿದೆ. ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಮೈತ್ರಿ ಬಗ್ಗೆ ತೀರ್ಮಾನ ಮಾಡಿದ್ದಾರೆ. ದೇವೇಗೌಡರು ನಮ್ಮ ಜೊತೆ ಇರಬೇಕು ಎಂಬುದು ಮೋದಿಯವರ ಅಪೇಕ್ಷೆ. ನಮ್ಮನ್ನ ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.