ಬೆಂಗಳೂರು: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೂ ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವುದು ಸತ್ಯಕ್ಕೆ ದೂರವಾದುದು ಹಾಗೂ ಕಪೋಲ ಕಲ್ಪಿತ. ತಮ್ಮ ಮತ್ತು
ಸಿಎಂ ಸಿದ್ದರಾಮಯ್ಯ ಅವರ ನಡುವೆ ತಂದು ಹಾಕಲು, ಒಡಕು ಮೂಡಿಸಲು ಈ ಸುಳ್ಳು ಸುದ್ದಿಯನ್ನು ಸೃಷ್ಠಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಲಿರುವ ಜಾತಿ ಗಣತಿ ವರದಿ ಅಂಗೀಕಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿತ್ತು. ಈ ಪತ್ರದಲ್ಲಿ ಅವರು ಜಾತಿ ಗಣತಿ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೆ ಇದೀಗ ಅವರು ಸ್ವತಃ ಈ ವಿಚಾರವನ್ನು ನಿರಾಕರಣೆ ಮಾಡಿದ್ದಾರೆ. ಜಾತಿ ಗಣತಿ ವರದಿ ಅಂಗೀಕಾರಕ್ಕೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂಬ ವಿಚಾರ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.