ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ 2023-24ನೇ ಸಾಲಿನ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. ಅಡಿ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು.
ಪರಿಷತ್ ಸಭೆ ಆರಂಭವಾಗುತ್ತಿದ್ದಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರು ತಮ್ಮ ಆರಂಭಿಕ ಮಾತುಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ,”ಸಂವಿಧಾನದ ಗಂಭೀರ ವಿದ್ಯಾರ್ಥಿ” ಎಂದು ಉಲ್ಲೇಖಿಸಿದರು. ಈ ಕಾಯ್ದೆ ಜಾರಿಗೆ ತರುವ ಹಿಂದೆ ಮುಖ್ಯಮಂತ್ರಿಗಳ ಸಾಮಾಜಿಕ ಬದ್ಧತೆಯನ್ನು ಅರ್ಥ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳ ಮತ್ತು ಕಾಯ್ದೆಯ ಆಶಯ ಮತ್ತು ಉದ್ದೇಶಕ್ಕೆ ಧಕ್ಕೆ ಆಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಎಸ್.ಸಿ.ಎಸ್.ಪಿ./ ಟಿಎಸ್.ಪಿ. ಅನುದಾನ ಖರ್ಚು ಮಾಡದಿದ್ದರೆ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಯ್ದೆ ಹೇಳುತ್ತದೆ. ಕಾಯ್ದೆ ಗಂಭೀರವಾಗಿದೆ. ಅದರಂತೆ ಯಾರು ನಿರ್ಲಕ್ಷ್ಯ ಮಾಡುತ್ತಾರೆ, ಅವರ ವಿರುದ್ಧ ಕಾಯ್ದೆಯನ್ವಯ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಪ್ರತಿ ಇಲಾಖೆಯು ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಯೋಜನೆಗಳ ಅನುಷ್ಠಾನದ ನಂತರ ಪರಿಣಾಮದ ಮೌಲ್ಯಮಾಪನ ವರದಿಯನ್ನೂ ಸಿದ್ಧಪಡಿಸಿ ಫಲಾನುಭವಿಗಳ ಸ್ಥಿತಿಗತಿಯಲ್ಲಿ ಆಗಿರುವ ಬದಲಾವಣೆ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ತಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಗಾಗಿ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ. ಅಧಿನಿಯಮ 2013 ಮತ್ತು ನಿಯಮ 2017 ನ್ನು ಜಾರಿಗೆ ತರಲಾಗಿದೆ. ಇದರನ್ವಯ ಅಭಿವೃದ್ಧಿ ಯೋಜನೆಗಳಿಗೆ ಹಂಚಿಕೆ ಮಾಡಿರುವ ಅನುದಾನದ ಶೇ. 24.10 ರಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒದಗಿಸಲಾಗುತ್ತಿದೆ. ಈ ಯೋಜನೆಯ ಅನುದಾನ ನೇರವಾಗಿ ಈ ಸಮುದಾಯಗಳಿಗೇ ತಲುಪಬೇಕು ಎಂಬ ಉದ್ದೇಶದಿಂದ ಕಾಯ್ದೆ ರೂಪಿಸಲಾಗಿದೆ. ಆದ್ದರಿಂದ ಈ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.