ಕೋಲಾರ,: ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್ ಎಂಬವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಎಂ ಶ್ರೀನಿವಾಸ್ ಅವರು ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕಾಂಗ್ರೆಸ್ ಮುಖಂಡರಾಗಿದ್ದು, ಜಿಲ್ಲಾಪಂಚಾಯ್ತಿ ಮಾಜಿ ಅಧ್ಯಕ್ಷರೂ ಆಗಿದ್ದರು. ಕೋಲಾರ ಜಿಲ್ಲೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ಶ್ರೀನಿವಾಸ್ ಮೇಲೆ ಹಲ್ಲೆ ನಡೆದಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು.
ಆರು ಜನ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಶ್ರೀನಿವಾಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಹಲ್ಲೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಶ್ರೀನಿವಾಸ್ ಅವರ ಎದೆ, ತಲೆ, ದೇಹದ ಮೈಮೇಲೆ ಮಾರಕಾಸ್ತ್ರಗಳಿಂದ ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ. ಕೋಲಾರದ ಜಾಲಪ್ಪಾ ಆಸ್ಪತ್ರೆಯಲ್ಲಿ ಶ್ರೀನಿವಾಸ್ ಅವರು ಮೃತಪಟ್ಟಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.