ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೀಪಾವಳಿ ಸಂದರ್ಭದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಟಾಕಿ ಮಾರಾಟದ ಮೇಲೆ ಹದ್ದಿನ ಕಣ್ಣಿಡಲು ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಸೋಮವಾರವಷ್ಟೇ ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಮಾಹಿತಿ ನೀಡಿದ್ದಾರೆ. ರಚನೆಯಾದ ಈ ವಿಶೇಷ ತಂಡಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇದ್ದಾರೆ ಎಂದು ತಿಳಿಸಿದರು.
ಈ ವಿಶೇಷ ತಂಡಗಳ ಸದಸ್ಯರು ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ. ವಾಯು ಮಾಲಿನ್ಯವನ್ನು ಮಾಡುವವರ ವಿರುದ್ಧ ಹಾಗೂ ನಿಷೇಧಿತ ಪಟಾಕಿ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಈಗಾಗಲೇ ರಾಜ್ಯ ಸರ್ಕಾರ ಹಸಿರು ಪಟಾಕಿಗಳನ್ನು ಸಾರ್ವಜನಿಕರಿಗೆ ಅವಕಾಶ ನೀಡಿದೆ. ಹೀಗಿದ್ದರೂ ಸಹಿತ ದುರದೃಷ್ಟವಶಾತ್, ತಮಿಳುನಾಡಿನ ಹೊಸೂರಿನಿಂದ ಹಲವಾರು ಜನರು ಮಾಲಿನ್ಯಕಾರಕ ಪಟಾಕಿಗಳನ್ನು ತಂದು ಹೊಡೆಯುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇತ್ತೀಚೆಗೆ ನಗರದ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿ ಒಟ್ಟು 17 ಮಂದಿ ಮೃತಪಟ್ಟಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ಎಲ್ಲ ಹಬ್ಬಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ. ಹಬ್ಬದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಿದೆ. ಸದ್ಯ ದೀಪಾವಳಿಯಲ್ಲಿ ಈ ನಿಯಮ ಮೀರಿ ಮಾಲಿನ್ಯಕಾರಕ ಪಟಾಕಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದರು.