ಗದಗ: ಜಿಲ್ಲೆಯಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾಗುವುದರ ಜೊತೆಗೆ ಬೆಳವಣಿಗೆಯಾಗಬೇಕಾಗಿದೆ. ಸಣ್ಣ ಕೈಗಾರಿಕೆ ಸಚಿವರ ಮಾಹಿತಿ ಪ್ರಕಾರ ದೊಡ್ಡ ಪ್ರಮಾಣದ ಇಂಡಸ್ಟ್ರಿಯಲ್ ಎಸ್ಟೇಟ್ (Industrial Estate) ನಿರ್ಮಾಣ ಮಾಡಲು ಸಿದ್ಧತೆ ನಡೆಸಲಾಗಿದ್ದು, 216 ಎಕರೆ ಭೂಮಿಯನ್ನು ಗುರುತಿಸಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ (HK Patil) ಹೇಳಿದರು.
ನಗರದ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗ, ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕೈಗಾರಿಕಾ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಗದಗ ಉತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಹಿಂದೆ ಉತ್ಪಾದನಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದ ಗದಗ ಜಿಲ್ಲೆಯು ಇಂದು ಉತ್ಪಾದನಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದೆ.
ಅದರ ಪರಿಣಾಮ ಉದ್ಯೋಗ ಸೃಷ್ಟಿಯಲ್ಲೂ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಜಿಲ್ಲೆ ಈ ಮೊದಲು ಜಿನ್ನಿಂಗ್, ಸ್ಪಿನ್ನಿಂಗ್, ಕಾಟನ್ ಮಿಲ್, ರವಾ ಮಿಲ್, ಆಯಿಲ್ ಮಿಲ್ನಂತಹ ಉತ್ಪಾದನಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಆದರೆ ಇಂದು ಸ್ಥಳೀಯರು ಕೈಗಾರಿಕಾ, ಉದ್ಯಮ, ಉತ್ಪಾದನೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಉತ್ಪಾದನಾ ವ್ಯವಸ್ಥೆಗೆ ಕೈ ಹಾಕುತ್ತಿಲ್ಲ. ಹೀಗಾಗಿ ಉತ್ಪಾದನೆ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದೇವೆ ಎಂದರು.