ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದು ಮೂರ್ನಾಲ್ಕು ದಿನಗಳೇ ಕಳೆದಿವೆ. ಹೀಗಿದ್ದೂ ಐಪಿಎಲ್ ಫೈನಲ್ ಬಗ್ಗೆ ಕ್ರಿಕೆಟ್ ಅಭಿಮಾನಿಗಳ ಕ್ರೇಜ್ ಇನ್ನೂ ಕಮ್ಮಿಯಾಗಿಲ್ಲ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಭಾವಿಪತ್ನಿ ಉತ್ಕರ್ಷ ಪವಾರ್, ಸಿಎಸ್‌ಕೆ ತಂಡವು ಚಾಂಪಿಯನ್ ಆಗುತ್ತಿದ್ದಂತೆಯೇ ಕ್ಯಾಪ್ಟನ್ ಕೂಲ್ ಧೋನಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವಿಡಿಯೋವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಈ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗುತ್ತಿದೆ.
ಹೌದು, 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಹಾಗೂ ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿತ್ತು. ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸುವ ಮೂಲಕ ದಾಖಲೆಯ 5ನೇ ಬಾರಿಗೆ ಐಪಿಎಲ್ ಟ್ರೋಫಿಗೆ ಮುತ್ತಿಕ್ಕುವಲ್ಲಿ ಯಶಸ್ವಿಯಾಗಿತ್ತು. ಚೆನ್ನೈ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆಯೇ ಗಾಯಕ್ವಾಡ್ ಪತ್ನಿ ಉತ್ಕರ್ಷ ಪವಾರ್ ಮೈದಾನಕ್ಕೆ ಬಂದು ಧೋನಿ ಕಾಲಿಗೆರಗಿ ಆಶೀರ್ವಾದ ಪಡೆದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.