ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಇಂದು ನಡೆಯುತ್ತಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ಭದ್ರತಾ ಕಾರಣಗಳಿಗಾಗಿ ಸರ್ಕಾರವು ದೇಶದಲ್ಲಿ ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಿದೆ. ಪಾಕಿಸ್ತಾನ ಮೂಲದ ಡಾನ್ ವರದಿಯ ಪ್ರಕಾರ, 12 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ಪಾಕಿಸ್ತಾನದಲ್ಲಿ ಬೆಳಗ್ಗೆ 8 ಗಂಟೆಗೆ (ಸ್ಥಳೀಯ ಕಾಲಮಾನ) ಮತದಾನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸಂಜೆ 5 ರವರೆಗೆ ಇರಲಿದೆ. ಸದ್ಯ ಪಾಕಿಸ್ತಾನದ ಹಾಲಿ ಆಂತರಿಕ ಸಚಿವಾಲಯವು ಪಾಕಿಸ್ತಾನದ ಒಟ್ಟಾರೆ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ ಎಂದು ವರದಿಯಾಗಿದೆ.
ಭದ್ರತಾ ಕ್ರಮಗಳ ಭಾಗವಾಗಿ ಪಾಕಿಸ್ತಾನದಾದ್ಯಂತ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ. ಇಂದು ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ದೇಶದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.