ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸದ ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರಕ್ಕೆ ಮೂಲಭೂತ ಸೌಕರ್ಯ ಕೊರತೆ ಇರುವುದು ತಿಳಿದಿಲ್ಲವೇ ? ಮೂಲಭೂತ ಸೌಕರ್ಯ ಒದಗಿಸಲೂ 5 ವರ್ಷಗಳ ಯೋಜನೆ ಬೇಕೆ ? 464 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲ. 32 ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ.
ಬಡ ಮಕ್ಕಳಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲವೇ ? ಶ್ರೀಮಂತರ ಮಕ್ಕಳು ಮಾತ್ರ ಶಿಕ್ಷಣ ಪಡೆಯಬೇಕೇ ? ಮೂಲಭೂತ ಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆ ಮುಚ್ಚುತ್ತಿವೆ. ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುವಂತಾಗಿದೆ. ಸರ್ಕಾರಿ ಶಾಲೆಗಳ ಬದಲು ಖಾಸಗಿ ಶಾಲೆ ಪ್ರೋತ್ಸಾಹಿಸುತ್ತಿದ್ದೀರಾ? ಹಣವಿಲ್ಲದ ಬಡ ಜನರು ಮಕ್ಕಳಿಗೆ ಶಿಕ್ಷಣ ನೀಡುವುದು ಹೇಗೆ? ಎಂದು ತರಾಟೆಗೆ ತೆಗೆದುಕೊಂಡಿದೆ.