ನವದೆಹಲಿ: ರಾಜ್ಯಕ್ಕೆ ಬರ ಪರಿಹಾರ (Drought Relief Fund) ಬಿಡುಗಡೆಗೊಳಿಸುವ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ ಅಜುರ್ನ್ ಮುಂಡಾ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ರಾಜ್ಯ ಈ ವರ್ಷ ಭೀಕರ ಬರಕ್ಕೆ ತುತ್ತಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸರಿಯಾದ ಸಮಯದಲ್ಲಿ ಅವರಿಗೆ ಪರಿಹಾರ ಧನ ನೀಡಬೇಕಿದೆ. ಹೀಗಾಗಿ ಕೇಂದ್ರ ಸರ್ಕಾರ ಶೀಘ್ರವಾಗಿ ಕರ್ನಾಟಕದ ಬರ ಪರಿಹಾರ ಮನವಿಯ ಬಗ್ಗೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಜೊತೆ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅಮಿತ್ ಶಾ ಅವರು ಡಿ.23 ರಂದು ಉನ್ನತ ಮಟ್ಟದ ಸಭೆ ನಡೆಸಿ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.