ಗ್ಯಾರಂಟಿ ಯೋಜನೆ ಜಾರಿಗೆ 59,000 ಕೋಟಿ ವಾರ್ಷಿಕ ವೆಚ್ಚ – ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವಾರ್ಷಿಕ ವೆಚ್ಚ ತಗುಲಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಹೇಳಿದ್ದಾರೆ. ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ವಿವರಿಸಿದ್ದಾರೆ.

Loading

Leave a Reply

Your email address will not be published. Required fields are marked *