ಬೆಂಗಳೂರು;- ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಕ್ಯಾಲೆಂಡರ್ ಈವೆಂಟ್ ಜಾರಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧಿಕಾರಿಗಳು, ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪರಿಷತ್ತು ಕಾರ್ಯನಿರತವಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿನ ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಸರಿಪಡಿಸಲು ಏಕರೂಪದ ಕ್ಯಾಲೆಂಡರ್ ಆಫ್ ಇವೆಂಟ್ಸ್ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿಕ್ಷಣ ಕ್ಷೇತ್ರದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್ಲಾಗ್ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡಬೇಕು. ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಸಿಎಂ ಸೂಚನೆ ನೀಡಿದರು.
ಅಲ್ಲದೆ, ಜವಹರ್ ಲಾಲ್ ನೆಹರು ವಿಶ್ವವಿದ್ಯಾಲಯ (ಜೆ ಎನ್.ಯು)ದಲ್ಲಿ ಕನ್ನಡ ಅಧ್ಯಯನ ಪೀಠದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು. ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದರು.