ಬೆಂಗಳೂರು : ರಾಜ್ಯದ 31 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ. 20 ರ ನಾಳೆ ಮಧ್ಯಾಹ್ನ 12.30 ಕ್ಕೆ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಭಾಗಿಯಾಗುವಂತೆ ವಿವಿಧ ರಾಜ್ಯಗಳ ಬಿಜೆಪಿಯೇತರ ಮುಖ್ಯಮಂತ್ರಿಗಳು ಹಾಗೂ ಪಕ್ಷಗಳ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ.
ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಹೀಗಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದತೆ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕಂತೆ ಸಿದ್ಧತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ರೀಡಾಂಗಣದಲ್ಲಿ ಸುಮಾರು 35 ಸಾವಿರ ಸೀಟುಗಳ ವ್ಯವಸ್ಥೆ ಇದ್ದು, ಇದರಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಆಹ್ವನಿತರಿಗೆ ಅವಕಾಶ ನೀಡಿ,ಉಳಿದ ಜಾಗದಲ್ಲಿ ಸಾರ್ವಜನಿಕರು ಕೂರಲು ವ್ಯವಸ್ಥೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ 1 ಲಕ್ಷ ಮಂದಿ ಆಗಮಿಸುವ ಸಾಧ್ಯತೆ ಇದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನ?
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಬಿಹಾರ್ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದಿಚೆರಿ ಸಿಎಂ ಎನ್.ರಂಗಸ್ವಾಮಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಆಹ್ವಾನಿಸಲಾಗಿದೆ.