ಬೆಂಗಳೂರು;- ಮೀಸಲಾತಿ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ನಗರದಲ್ಲಿ ಮಾತನಾಡಿದ ಅವರು,
ಮೀಸಲಾತಿ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚಿಸಲು ಸುಪ್ರೀಂ ಕೋರ್ಟ್ ಅವಕಾಶ ನೀಡಿಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಲು ಮೀಸಲಾತಿ ಹೆಚ್ಚಳ ಅತ್ಯಗತ್ಯ. ಈ ಬಗ್ಗೆ ಕಾನೂನು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದೇನೆ.
ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದರು. ಹಿಂದುಳಿದ ಸಮುದಾಯದವರಿಗೆ ಭೂಮಿ ಸಿಗಬೇಕು. ಈ ಹಿಂದೆ ಬೆಂಗಳೂರು ನಗರದಲ್ಲಿ ಸುಮಾರು 80 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿತ್ತು. ಯಾದವ ಸಮುದಾಯಕ್ಕೆ ಯಶವಂತಪುರದಲ್ಲಿ ಜಾಗ ನೀಡಲಾಗಿತ್ತು. ಇರುವ ಜಾಗದಲ್ಲಿ ಶಿಕ್ಷಣ ಸಂಸ್ಥೆ ನಿರ್ಮಿಸಬೇಕು. ಅಗತ್ಯ ಅನುದಾನವನ್ನೂ ನೀಡಲಾಗುವುದು. ಎಲ್ಲ ಯಾದವ ಜನಾಂಗದವರು ಶಿಕ್ಷಣ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು