ಆಗಸ್ಟ್ 30ರಿಂದ ಆರಂಭಗೊಳ್ಳಲಿರುವ ಏಷ್ಯಾಕಪ್‌ಗಾಗಿ ಬುಧವಾರದಿಂದ ಭಾರತ ತಂಡಕ್ಕೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ಶಿಬಿರ ಆರಂಭಗೊಳ್ಳಲಿದೆ. ವಿಂಡೀಸ್ ವಿರುದ್ಧದ ಏಕದಿನ ಸರಣಿ ಬಳಿಕ ವಿಶ್ರಾಂತಿಯಲ್ಲಿರುವ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖರು ಬುಧವಾರವೇ ಎನ್‌ಸಿಎಗೆ ಆಗಮಿಸಲಿದ್ದಾರೆ.
ಉಳಿದಂತೆ ಸದ್ಯ ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿರುವ ಜಸ್‌ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ ಸೇರಿದಂತೆ ಹಲವರು ಸರಣಿ ಮುಗಿದ ಬಳಿಕ ಶಿಬಿರಕ್ಕೆ ಹಾಜರಾಗಲಿದ್ದಾರೆ. ಆಗಸ್ಟ್ 29ರ ವರೆಗೆ ಶಿಬಿರ ನಡೆಯಲಿದ್ದು, ಬಳಿಕ ಆಟಗಾರರು ಶ್ರೀಲಂಕಾಕ್ಕೆ ಪ್ರಯಾಣಿಸಲಿದ್ದಾರೆ.
ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ, ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2ರಂದು ಪಾಕ್ ವಿರುದ್ಧ ಆಡುವ ಮೂಲಕ ಭಾರತ ಅಭಿಯಾನ ಆರಂಭಿಸಲಿದೆ.
ತಂಡ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್‌ಪ್ರೀತ್ ಬೂಮ್ರಾ, ಮೊಹಮದ್ ಶಮಿ, ಮೊಹಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್(ಮೀಸಲು ಆಟಗಾರ).
ರಾಹುಲ್ಗೆ ಮತ್ತೆ ಗಾಯ!
ಐಪಿಎಲ್ ವೇಳೆ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿ ಈಗಷ್ಟೇ ಸಂಪೂರ್ಣ ಚೇತರಿಸಿಕೊಳ್ಳುತ್ತಿರುವ ರಾಹುಲ್ ಹೊಸದಾಗಿ ಸಣ್ಣ ಪ್ರಮಾಣದ ಗಾಯಕ್ಕೆ ತುತ್ತಾಗಿರುವುದಾಗಿ ಅಗರ್ಕರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್‌ರನ್ನು ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿದೆ. ಸದ್ಯ ರಾಹುಲ್ ತಂಡದಲ್ಲಿದ್ದರೂ ಟೂರ್ನಿಯ ಮೊದಲ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ.